October 1, 2023 7:18 am

ಸಾಮಾಜಿಕ ನ್ಯಾಯ ಎಂದರೇನು?

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ನಾಗಮೋಹನ್ ದಾಸ್ ಅವರು ಸಂವಿಧಾನ ಓದು, ಸಂವಿಧಾನ ಮತ್ತು ವಚನಗಳು, ಮಾನವ ಹಕ್ಕುಗಳು ಮತ್ತು ಮೀಸಲಾತಿ ಭ್ರಮೆ ಮತ್ತು ವಾಸ್ತವ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಆಶಯಗಳನ್ನು ಕನ್ನಡಿಗರಿಗೆ ಸರಳವಾಗಿ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂವಿಧಾನದ ರಕ್ಷಣೆಯ ವಿಷಯದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಉಪನ್ಯಾಸಗಳನ್ನು ನೀಡಿರುವ ಇವರು ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದಾರೆ.

ಸಾಮಾಜಿಕ ನ್ಯಾಯವೆಂದರೆ ಸಮಾಜದಲ್ಲಿರುವ ಎಲ್ಲ ರೀತಿಯ ಅಸಮಾನತೆಯನ್ನು ಹೋಗಲಾಡಿಸಿ ಹಿಂದುಳಿದವರ, ಬಡವರ, ದುರ್ಬಲರ, ತುಳಿತಕ್ಕೆ ಮತ್ತು ಶೋಷಣೆಗೆ ಒಳಪಟ್ಟ ಅಸಹಾಯಕರನ್ನು ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮೇಲಕ್ಕೆತ್ತಲು ಶಾಸನಗಳನ್ನು, ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನು ರೂಪಿಸಿ ಅವುಗಳನ್ನು ಜಾರಿಗೊಳಿಸುವುದು. ಮುಂದುವರೆದು ಸಂವಿಧಾನದ ಪ್ರಸ್ತಾವನೆಯಲ್ಲಿ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ದೊರಕಿಸಿಕೊಡುವುದಾಗಿ ಸ್ಪಷ್ಟಪಡಿಸಿದೆ. ಯಾವ ಭೇದವಿಲ್ಲದೆ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳಾದ ಸಮಾನತೆಯ, ಸ್ವಾತಂತ್ರ್ಯ, ಶೋಷಣೆಯ ವಿರುದ್ಧ, ಧಾರ್ಮಿಕ ಸ್ವಾತಂತ್ರ್ಯ, ಸಾಂಸ್ಕೃತಿಕ, ಶೈಕ್ಷಣಿಕ, ಸಂವಿಧಾನಾತ್ಮಕ ಪರಿಹಾರದ ಹಕ್ಕುಗಳನ್ನು ನೀಡಲಾಗಿದೆ. ಇದೇ ರೀತಿಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಕರ್ತವ್ಯಗಳನ್ನು ನೀಡಲಾಗಿದೆ.

ನಮ್ಮ ಸಂವಿಧಾನದಲ್ಲಿ ಲಿಂಗಭೇದ ನಿವಾರಣೆಗೆ ಹಾಗೂ ಮಹಿಳೆಯರ ಸ್ಥಿತಿಗತಿ ಅಭಿವೃದ್ಧಿಗೆ ಹಲವು ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. ಅನುಚ್ಛೇದ 14ರಲ್ಲಿ ಮಹಿಳೆ ಮತ್ತು ಪುರುಷರಿಗೆ ಸಮಾನವಾದ ಕಾನೂನಿನ ರಕ್ಷಣೆಯನ್ನು ಒದಗಿಸಲಾಗಿದೆ. ಅನುಚ್ಛೇದ 18ರಲ್ಲಿ ಸರ್ಕಾರಿ ನೌಕರಿ ಅಥವಾ ಯಾವುದೇ ಹುದ್ದೆಯಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ನೀತಿ ತೋರಬಾರದೆಂದು ನಿರ್ದೇಶಿಸಿದೆ. ಅನುಚ್ಛೇದ 21ರಲ್ಲಿ ಮಹಿಳೆಯರು ಮಾನವ ಘನತೆಯಿಂದ ಬದುಕುವ ಹಕ್ಕನ್ನು ಕೊಡುತ್ತದೆ. ಮಹಿಳೆಯರು ಮತ್ತು ಪುರುಷರಿಗೆ ಸಮಾನವಾದ ಮೂಲಭೂತ ಹಕ್ಕುಗಳನ್ನು ನೀಡಲಾಗಿದೆ. ಸರ್ಕಾರವು ಮಹಿಳೆಯರ ಅಭಿವೃದ್ಧಿಗಾಗಿ ಪ್ರತ್ಯೇಕ ಕಾನೂನುಗಳನ್ನು ಮತ್ತು ಯೋಜನೆಗಳನ್ನು ರೂಪಿಸುವ ಅಧಿಕಾರವನ್ನು ನೀಡಲಾಗಿದೆ. ಅನುಚ್ಛೇದ 51(ಎ)ನಲ್ಲಿ ಮಹಿಳೆಯರ ಗೌರವಕ್ಕೆ ಚ್ಯುತಿ ತರುವ ಆಚರಣೆಗಳನ್ನು ತ್ಯಜಿಸಬೇಕೆಂದು ನಿರ್ದೇಶಿಸಿದೆ. ಅನುಚ್ಛೇದ 243ರಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಕಡ್ಡಾಯ ಮೀಸಲಾತಿ ಒದಗಿಸಲಾಗಿದೆ. ಇವೆಲ್ಲವೂ ಸಾಮಾಜಿಕ ನ್ಯಾಯವೇ!

ದುಡಿಯುವ ವರ್ಗದ ಹಿತವನ್ನು ಕಾಪಾಡುವ ಅಂಶಗಳನ್ನು ಹಲವಾರು ಅನುಚ್ಛೇದಗಳಲ್ಲಿ ಪ್ರಸ್ತಾಪಿಸಲಾಗಿದೆ. ಪ್ರಮುಖವಾದ ಅನುಚ್ಛೇದಗಳೆಂದರೆ 14, 15, 16, 19, 21, 23, 24, 39, 41, 42 ಮತ್ತು ಈ ಅನುಚ್ಛೇದಗಳ ಅನುಸಾರ ದುಡಿಯುವ ವರ್ಗಕ್ಕೆ ಸಂಘ ಸಂಸ್ಥೆಗಳನ್ನು ಸ್ಥಾಪಿಸಿಕೊಳ್ಳುವುದಕ್ಕೆ, ಸಭೆ ಸೇರುವುದಕ್ಕೆ, ಶಾಂತಿಯುತವಾಗಿ ಪ್ರತಿಭಟಿಸುವುದಕ್ಕೆ, ಧರಣಿ ನಡೆಸಲು, ಮುಷ್ಕರ ಹೂಡಲು ಮತ್ತು ಅಭಿಪ್ರಾಯವನ್ನು ವ್ಯಕ್ತಪಡಿಸುವುದಕ್ಕೆ ಸ್ವಾತಂತ್ರ್ಯ ನೀಡಲಾಗಿದೆ. ಮನುಷ್ಯರ ಮಾರಾಟ ಮತ್ತು ಬಲಾತ್ಕಾರದ ದುಡಿಮೆಗಳನ್ನು ನಿಷೇಧಿಸಲಾಗಿದೆ. 14 ವರ್ಷಗಳಿಗಿಂತ ಕಡಿಮೆ ವಯಸ್ಸಿನ ಯಾವುದೇ ಮಗುವನ್ನು ಕಾರ್ಖಾನೆ ಅಥವಾ ಗಣಿಯಲ್ಲಿ ಕೆಲಸ ಮಾಡಲು ನಿಯೋಜಿಸತಕ್ಕದಲ್ಲ ಅಥವಾ ಅಪಾಯಕಾರಿಯಾದ ಉದ್ಯೋಗದಲ್ಲಿ ತೊಡಗಿಸತಕ್ಕದ್ದಲ್ಲ. ಪುರುಷರಿಗೂ ಮತ್ತು ಮಹಿಳೆಯರಿಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು, ಎಲ್ಲರಿಗೂ ಕನಿಷ್ಠ ವೇತನ ನೀಡುವುದು, ಕೈಗಾರಿಕಾ ಸಂಸ್ಥೆಗಳ ಆಡಳಿತದಲ್ಲಿ ಕಾರ್ಮಿಕರು ಭಾಗವಹಿಸುವುದು ಇತ್ಯಾದಿ ಹಕ್ಕುಗಳನ್ನು ಮತ್ತು ರಕ್ಷಣೆಗಳನ್ನು ನೀಡಲಾಗಿದೆ. ಇವೆಲ್ಲವೂ ಸಾಮಾಜಿಕ ನ್ಯಾಯದ ಒಂದು ಭಾಗವೇ ಸರಿ.

ಸಂವಿಧಾನವು ಅಸ್ಪೃಶ್ಯತೆಯ ನಿರ್ಮೂಲನೆ ಮತ್ತು ಅಸ್ಪೃಶ್ಯರ ವಿಮೋಚನೆಗೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದೆ. ಅನುಚ್ಛೇದ 15, 16, 17, 21, 23, 43, 45, 46, 243, 330, 332, 335, 338, 340, 341 ಮತ್ತು 342. ಈ ಅನುಚ್ಛೇದಗಳ ಪ್ರಕಾರ ಧರ್ಮ, ಜನಾಂಗ, ಜಾತಿ ಆಧಾರದ ಮೇಲೆ ಯಾವುದೇ ವ್ಯಕ್ತಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿರ್ಬಂಧಿಸುವಂತಿಲ್ಲ; ಎಲ್ಲರಿಗೂ ಸಮಾನ ಅವಕಾಶಗಳನ್ನು ಒದಗಿಸಬೇಕು, ಯಾರಿಗೂ ಯಾವುದೇ ರೀತಿಯ ತಾರತಮ್ಯ ತೋರುವಂತಿಲ್ಲ. ಅಸ್ಪೃಶ್ಯತೆಯ ಆಚರಣೆ ಶಿಕ್ಷಾರ್ಹ ಅಪರಾಧ, ರಾಜ್ಯ ಸರ್ಕಾರಗಳು ಇವರ ಶೈಕ್ಷಣಿಕ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ವೃದ್ಧಿಗೊಳಿಸಲು ವಿಶೇಷ ಕ್ರಮ ಕೈಗೊಳ್ಳಬೇಕು ಮತ್ತು ಎಲ್ಲಾ ರೀತಿಯ ಶೋಷಣೆಯಿಂದ ಅವರನ್ನು ರಕ್ಷಿಸತಕ್ಕದ್ದು ಎನ್ನುತ್ತದೆ. ಇದೂ ಸಹ ಸಾಮಾಜಿಕ ನ್ಯಾಯವೇ!

ಸಂವಿಧಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸರ್ಕಾರದ ಉದ್ಯೋಗಗಳಲ್ಲಿ ಮತ್ತು ರಾಜಕೀಯ ಮೀಸಲಾತಿಯನ್ನು ನೀಡಲಾಗಿದೆ. ಮೀಸಲಾತಿಯು ಸಾಮಾಜಿಕ ನ್ಯಾಯದ ಒಂದು ಸಣ್ಣ ಭಾಗವಷ್ಟೆ. ಮೀಸಲಾತಿಯೇ ಸಾಮಾಜಿಕ ನ್ಯಾಯವಲ್ಲ. ಸಾಮಾಜಿಕ ನ್ಯಾಯವೆಂದರೆ ಕೇವಲ ಮೀಸಲಾತಿಯಲ್ಲ.

ಸಾಮಾಜಿಕ ನ್ಯಾಯವನ್ನು ವಿಸ್ತರಿಸಬೇಕಾಗಿದೆ. ಕೃಷಿ ಬಿಕ್ಕಟ್ಟಿನಿಂದ ರೈತರು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶೇ. 90ರಷ್ಟು ಕಾರ್ಮಿಕರು ಅಸಂಘಟಿತ ವಲಯದಲ್ಲಿ ದುಡಿಯುತ್ತಿದ್ದಾರೆ. ವಯೋವೃದ್ಧರು ಅನೇಕ ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ವಿಕಲಚೇತನರು ಸಮಾಜದ ಮುಖ್ಯವಾಹಿನಿಗೆ ಬರಲಾಗಿಲ್ಲ, ಅಭಾಗ್ಯ ಮಹಿಳೆಯರನ್ನು ವೇಶ್ಯಾವಾಟಿಕೆಯಿಂದ ಹೊರತರಲು ಸಾಧ್ಯವಾಗಿಲ್ಲ. ಇಂತಹ ಅನೇಕರ ನೆರವಿಗೆ ಹೋಗುವುದು ಕೂಡ ಸಾಮಾಜಿಕ ನ್ಯಾಯವಾಗಬೇಕು.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು